ಉತ್ತರ ಕನ್ನಡ: ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಘಟನೆ ಭಟ್ಕಳದಲ್ಲಿ ಇದೀಗ ದೂರು–ಪ್ರತಿದೂರಿಗೆ ಕಾರಣವಾಗಿದೆ. ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮೆರವಣಿಗೆ ಗುಲ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಕಲ್ಲು ತೂರಾಟದಿಂದ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಅಬ್ದುಲ್ ಅಲಿಂ ಎಂಬವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಲ್ಲು ತೂರಾಟ ನಡೆಸಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಇದರ ನಡುವೆ ಗಣೇಶೋತ್ಸವ ಸಮಿತಿಯೂ ಪೊಲೀಸರಿಗೆ ಪ್ರತಿ ದೂರು ನೀಡಿದೆ. ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಗಣೇಶನ ಮೂರ್ತಿಯತ್ತಲೂ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಆರೋಪಿಸಿದ್ದಾರೆ. ಹೀಗಾಗಿ ಪ್ರಕರಣ ಇದೀಗ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಎರಡೂ ಕಡೆಯ ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೂರು ಮತ್ತು ಪ್ರತಿದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಕಲ್ಲು ತೂರಾಟದ ಹಿಂದೆ ಯಾರಿದ್ದಾರೆ, ನಿಖರವಾಗಿ ಏನು ನಡೆದಿದೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಸದ್ಯ ಭಟ್ಕಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕ್ರಮವಹಿಸಿದ್ದಾರೆ.




