ಹುಬ್ಬಳ್ಳಿ: ಗಬ್ಬೂರು ಆರ್‌ಟಿಓ ಕಚೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಪಕ್ಕದಲ್ಲಿ ನಿಂತಿದ್ದ ಮಹೇಂದ್ರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ತಿರುವಿನ ಸೂಚನಾ ಫಲಕಕ್ಕೆ ಗುದ್ದಿದ ಘಟನೆ ನಡೆದಿದೆ.
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಕಾರಿನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿ ಆರು ಮಂದಿ ಇದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಇದೇ ಸ್ಥಳದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೇ ಇದಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾಮಗಾರಿ ಆರಂಭಕ್ಕೂ ಮುನ್ನ ಎಚ್ಚರಿಕೆ ಫಲಕ ಹಾಗೂ ಸೂಕ್ತ ನಾಮಫಲಕಗಳನ್ನು ಅಳವಡಿಸದಿರುವುದರಿಂದ ವಾಹನ ಸವಾರರಿಗೆ ಮಾಹಿತಿ ಸಿಗದೆ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




