ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಬಸವನಗುಡಿ ಎನ್.ಆರ್. ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ರಾಷ್ಟ್ರರಕ್ಷಣಾ ಪಡೆ ಕಾರ್ಯಕರ್ತ ಮುರುಳಿ ಅವರ ತಲೆಗೆ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಬಳಿಕ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ನಡುರಸ್ತೆಯಲ್ಲಿ ಧರಣಿ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಎಫ್‌ಐಆರ್ ದಾಖಲಾಗಿವೆ. ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಗುಂಪುಗಳ ನಡುವೆ ದ್ವೇಷಕ್ಕೆ ಪ್ರಚೋದನೆ ಆರೋಪದಡಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ ಹಾಗೂ ವಿನೋದ್ ನಾಯಕ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ.
ಇನ್ನೊಂದೆಡೆ ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಮಲ್ ಪಾಷಾ, ಅಬೂಬಕರ್ ಸಿದ್ಧೀಕ್ ಹಾಗೂ ಸೈಯದ್ ಅನಾಸ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇವರನ್ನೂ ಬಂಧಿಸಲಾಗಿದೆ. ಬಂಧಿತರಲ್ಲಿ ಅಪ್ರಾಪ್ತರು ಇರುವುದಾಗಿ ಮಾಹಿತಿ ಲಭ್ಯವಾಗಿದೆ.
ಸಾರ್ವಜನಿಕ ರಸ್ತೆ ತಡೆ ಹಾಗೂ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದ್ದು, ಪೊಲೀಸರು ಗಸ್ತು ಮುಂದುವರಿಸಿದ್ದಾರೆ.




